ನೀರಾವರಿ ಬಗ್ಗೆ ಕನಿಷ್ಠ ಜ್ಞಾನ ಇರಬೇಕು: ಕುಮಾರಸ್ವಾಮಿ

ಬೆಂಗಳೂರು:

     ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರವಾರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

   ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ಸ್  ನೀರು ಹರಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದೆ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರ್ಕಾರಕ್ಕೆ ಇರಲೇ ಇಲ್ಲ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ.

    ಆ.10ರಂದು ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ನಡೆಯಿತು. ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಆಯಿತು. ಮುಂದಿನ 15 ದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿತು. ತಕ್ಷಣವೇ ಸುಪ್ರೀಂಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು.

    ಸರ್ಕಾರ ಹಾಗೆ ಮಾಡಲೇ ಇಲ್ಲ. ಸುಪ್ರೀಂಕೋರ್ಟ್ ಕಡೆ ಮುಖ ಮಾಡದೆ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ಪ್ರಾಧಿಕಾರದ ಆದೇಶವನ್ನೇ ನೆಪ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿತು. ತನ್ನ ತಲೆ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು, ಅದೇ ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟಿತು.

    ಸರ್ಕಾರ ಎಸಗಿದ ತಪ್ಪು ಇಷ್ಟೇ ಅಲ್ಲ, ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಕೊಟ್ಟ ಸಲಹೆಗಳನ್ನೂ ಗಾಳಿಗೆ ತೂರಿತು. ನಮ್ಮ ಸಲಹೆಗೆ ಕವಡೆಕಾಸಿನ ಕಿಮ್ಮತ್ತೂ ಕೊಡದೆ ಕನ್ನಡಿಗರ ಹಿತವನ್ನು ತನ್ನ ರಾಜಕೀಯ ಸ್ವಾರ್ಥಕ್ಕೆ ಬಲಿ ಕೊಟ್ಟಿದೆ.

    ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಎಂದು ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ. ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ.

    ರಾಜ್ಯಸಭೆಯಲ್ಲಿ ಎಚ್ ಡಿ ದೇವೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಕಾವೇರಿ ಬಗ್ಗೆ ದನಿ ಎತ್ತಿದರು. ಮಾನ್ಯ ಸಭಾಪತಿಗಳು ಕುಳಿತೇ ಮಾತನಾಡಿ ಎಂದರೂ ಅವರು ಎದ್ದುನಿಂತು ರಾಜ್ಯದ ಪರ ಹಕ್ಕು ಮಂಡಿಸಿದರು. ಆದರೆ, ರಾಜ್ಯದ ಇತರೆ ಸದಸ್ಯರು, ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿದ್ದರು! ಈ ಮೌನ ನನಗೆ ಅಚ್ಚರಿ ಉಂಟು ಮಾಡಿದೆ. ಅವರು ಕಾಂಗ್ರೆಸ್ ಅಧ್ಯಕ್ಷರು ಹೌದು. ಆದರೆ, ಕರ್ನಾಟಕದ ಹಿತದ ಬಗ್ಗೆ ಅವರ ನಿಲುವೇನು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

    ಸೆ. 13ರಿಂದ ನಿತ್ಯವೂ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಪ್ರಾಧಿಕಾರ ಆದೇಶ ನೀಡಿದೆ. ಅದನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಕೋರ್ಟ್ ಆದೇಶಕ್ಕೂ ಮೊದಲು ಪ್ರಾಧಿಕಾರ ಹೇಳಿತು ಎಂದು ವಿದ್ಯುತ್ ವೇಗದಲ್ಲಿ ನೀರು ಬಿಟ್ಟ ಸರ್ಕಾರ; ಈಗ ಸುಪ್ರೀಂಕೋರ್ಟ್ ಹೇಳಿದೆ, ಇನ್ನೇನು ಮಾಡುವುದು ಎಂದು ಕೈ ಚೆಲ್ಲಿದೆ. ಮರು ಪರಿಶೀಲನಾ ಅರ್ಜಿಯನ್ನು ಕೋರ್ಟಿಗೆ ತುರ್ತಾಗಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap